ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ : ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ
ಯಾದಗಿರಿ: ಸೆಪ್ಟೆಂಬರ್, 26 : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಕಲಿಕಾ ಕ್ರಮ ಹಾಗೂ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಕಳೆದ ಸಾಲಿನಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಈ ಬಾರಿಯಲ್ಲಿ ಪುನಃ ದಾಖಲಾಗಲು ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯ ಗುರುಗಳು ಕಡ್ಡಾಯವಾಗಿ ಕ್ರಮ ವಹಿಸಬೇಕು ಎಂದು ಸೂಚಿಸಿದರು
ಕಳೆದ ಸಾಲಿಗಿಂತ ಈ ಬಾರಿ ಹೆಚ್ಚು ದಾಖಲಾಗಿ ಎಲ್ ಕೆ ಜಿ, ಯು ಕೆ ಜಿ ತರಗತಿಗಳು ನೋಂದಣಿ ಗೊಂಡಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.
ಇಲಾಖೆಯಲ್ಲಿ ಉಳಿಕೆ ಕಾಮಗಾರಿಗಳನ್ನು ಇನ್ನೊಂದು ತಿಂಗಳ ಒಳಗೆ ಪೂರ್ಣಗೊಳಿಸಬೇಕು ಹಾಗೂ ಪ್ರಾರಂಭಗೊಳ್ಳದ ಕಾಮಗಾರಿಗಳನ್ನು ಇನ್ನೂ 15 ದಿನದೊಳಗೆ ಪ್ರಾರಂಭಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಇದನ್ನೂ ನೋಡಿ:https://youtu.be/b13tdhuq-lI
ಕೆಪಿಎಸ್ಸಿ ಶಾಲೆಗಳು ಹಾಗೂ ಆರ್ಎಂಎಸ್ಎ ಶಾಲೆಗಳಲ್ಲಿ ಮುಖ್ಯ ಗುರುಗಳ ಹುದ್ದೆಯನ್ನು ನೀಡುವ ಬಗ್ಗೆ ಸರ್ಕಾರ ಪರಿಶೀಲಿಸಿ,
ಹೊಸ ತಾಲೂಕುಗಳಲ್ಲಿ ಅನುದಾನಿತ ಶಾಲೆಗಳಿಗೆ ಹಾಗೂ ಸರ್ಕಾರಿ ಶಾಲೆಗಳಿಗೆ ವೇತನದಲ್ಲಿ ವಿಳಂಬ ಉಂಟಾಗುತ್ತಿದ್ದು ಅದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿಪಾಟೀಲ ತುನ್ನೂರ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ್, ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪಿಎಂ ಪೋಷಣ್ ನಿರ್ದೇಶಕ ಸಿಂಧು ಬಿ ರೂಪೇಶ್, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್, ಜಿಲ್ಲಾ ಪಂಚಾಯತ ಸಿಇಓ ಲವೀಶ್ ಒರಡಿಯಾ, ಡಿಡಿಪಿಐ ಮಂಜುನಾಥ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಕನಕಪ್ಪ ಸೇರಿದಂತೆ ಕಲಬುರಗಿ ವಿಭಾಗದ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.